ಉಡುಪಿ: ಲಂಚಕ್ಕೆ ಬೇಡಿಕೆ; ಇಬ್ಬರ ಬಂಧನ!

ಉಡುಪಿಯ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಯ ಲೆಕ್ಕ ಪರಿಶೋಧನೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಉಡುಪಿ ಜಿಲ್ಲಾ ಸಹಕಾರಿ ಸಂಘದ ಲೆಕ್ಕ ಪರಿಶೋಧನ ಇಲಾಖೆಯ ಉಪ ನಿರ್ದೇಶಕಿ ರೇಣುಕಾ ಹಾಗೂ ಪ್ರಥಮ ದರ್ಜೆ ಸಹಾಯಕ ಜಯರಾಮ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. 

ಸೌಹಾರ್ದ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ ನಡೆಸಿಕೊಡಲು ತಲಾ 5 ಸಾವಿರದಂತೆ ಒಟ್ಟು ₹10 ಸಾವಿರ ಲಂಚಕ್ಕೆ ಇವರು ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಸೌಹಾರ್ದ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ನರೇಂದ್ರ ಅವರು ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ರೇಣುಕಾ ಅವರು ಉಡುಪಿಯಲ್ಲಿರುವ ತಮ್ಮ ಕಚೇರಿಯಲ್ಲಿ ಹಣ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಮಂಜುನಾಥ್ ಶಂಕರಹಳ್ಳಿ, ಇನ್‌ಸ್ಪೆಕ್ಟರ್ ರಾಜೇಂದ್ರ ನಾಯಕ್ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು