ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಬಿದಿರೆಯ ಪ್ರತಿಷ್ಠಿತ ಕಾಲೇಜಿನ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತನನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕಾಲೇಜಿನ ಹಳೆ ವಿದ್ಯಾರ್ಥಿನಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಳು. ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸಿದ ಪೊಲೀಸರು ಉಪನ್ಯಾಸಕರಾದ ನರೇಂದ್ರ, ಸಂದೀಪ್ ಮತ್ತು ಸ್ನೇಹಿತ ಅನೂಪ್‌ನನ್ನು ಬಂಧಿಸಿದ್ದಾರೆ.
ಮೊದಲು ವಿದ್ಯಾರ್ಥಿನಿಗೆ ನೋಟ್ಸ್ ನೀಡುವ ವಿಚಾರದಲ್ಲಿ ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ ಪರಿಚಯವಾಗಿದ್ದ. ಹಂತ ಹಂತವಾಗಿ ಚಾಟ್ ಮಾಡಿ ನೋಟ್ಸ್ ನೀಡುವುದಾಗಿ ಮತ್ತು ಸಹಾಯ ಮಾಡುವುದಾಗಿ ಹೇಳಿದ್ದ. ವಿದ್ಯಾರ್ಥಿನಿ ಬೆಂಗಳೂರಿಗೆ ಬಂದ ನಂತರವೂ ಸಲುಗೆ ಬೆಳೆಸಿದ್ದ. ಇದೆ ನೆಪದಲ್ಲಿ ವಿದ್ಯಾರ್ಥಿನಿಯನ್ನು ಬೆಂಗಳೂರಿನ ಮಾರತ್‌ಹಳ್ಳಿಯಲ್ಲಿರುವ ಗೆಳೆಯನ ರೂಮ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ರೇಪ್ ಮಾಡಿದ ಬಳಿಕ ಈ ವಿಚಾರವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ.
ಸ್ನೇಹಿತ ನರೇಂದ್ರ ಈ ಕೃತ್ಯ ಎಸಗಿದ್ದ ವಿಚಾರ ತಿಳಿದು ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ವಿದ್ಯಾರ್ಥಿನಿಯನ್ನು ಸಂಪರ್ಕಿಸಿದ್ದಾನೆ. ಈ ವೇಳೆ ವಿದ್ಯಾರ್ಥಿನಿ ವಿರೋಧ ವ್ಯಕ್ತಪಡಿಸಿದ್ದಾಳೆ. ಈ ಸಂದರ್ಭದಲ್ಲಿ ಸಂದೀಪ್, ನರೇಂದ್ರ ಜೊತೆಗೆ ಇರುವ ಫೋಟೋ, ವಿಡಿಯೋ ತನ್ನ ಬಳಿ ಇದೆ ಎಂದು ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ್ದಾನೆ.
ಸಂದೀಪ್ ಕರೆದುಕೊಂಡು ಹೋಗಿ ಅನೂಪ್ ರೂಮಿನಲ್ಲಿ ಅತ್ಯಾಚಾರ ಎಸಗಿದ್ದ. ನಂತರ ಅನೂಪ್ ಆಕೆಯನ್ನು ಸಂರ್ಪಕಿಸಿ ನೀನು ನನ್ನ ರೂಮಿಗೆ ಬಂದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಷ್ಟೇ ಅಲ್ಲದೇ ನನ್ನ ರೂಮ್ನಲ್ಲಿ ಸಿಸಿಟಿವಿ ಇದೆ ಎಂದು ಬೆದರಿಕೆ ಹಾಕಿದ್ದ. ನಂತರ ಅನೂಪ್ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ.
ಉಪನ್ಯಾಸಕ ಸ್ನೇಹಿತರ ಕಿರುಕುಳ ತಾಳಲಾರದೇ ಆರಂಭದಲ್ಲಿ ಸುಮ್ಮನಿದ್ದ ವಿದ್ಯಾರ್ಥಿನಿ ಸಮಸ್ಯೆ ಹೆಚ್ಚಾದ ಬಳಿಕ ನಡೆದ ನಡೆದ ಘಟನೆಗಳನ್ನು ಬೆಂಗಳೂರಿಗೆ ಬಂದಿದ್ದ ಪೋಷಕರ ಬಳಿ ತಿಳಿಸಿದ್ದಾಳೆ. ಪೋಷಕರು ಆಕೆಯನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಮಹಿಳಾ ಆಯೋಗದಲ್ಲಿ ಕೌನ್ಸಿಲಿಂಗ್ ಮಾಡಿದ ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೂಡಬಿದಿರೆಯಲ್ಲಿ ಓದು ಮುಗಿಸಿದ್ದ ವಿದ್ಯಾರ್ಥಿನಿ ಈಗ ರಾಮನಗರದಲ್ಲಿ ಎಂಜಿನಿಯರಿಂಗ್ ಓದುತ್ತಿದ್ದಾಳೆ. ಉಪನ್ಯಾಸಕರು ಇನ್‌ಸ್ಟಾ ಮೂಲಕ ಆಕೆಯನ್ನು ಸಂಪರ್ಕಿಸಿ ಚಾಟ್ ಮಾಡುತ್ತಿದ್ದರು.
0 ಕಾಮೆಂಟ್‌ಗಳು