ಅಸಂಖ್ಯಾತ ಭಕ್ತರ ಧಾರ್ಮಿಕ ಶೃದ್ದಾ ಕೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಹಾಗೂ ವ್ಯವಸ್ಥಿತ ಷಡ್ಯಂತ್ರವನ್ನು ಖಂಡಿಸಿ, ಪ್ರಕರಣದ ತನಿಖೆಯನ್ನು ಎನ್.ಐ.ಎ. ಗೆ ವಹಿಸಬೇಕು ಎಂಬ ಆಗ್ರಹದೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸೆ.1ರಂದು ನಡೆಯಲಿರುವ ರಾಜ್ಯ ಮಟ್ಟದ 'ಧರ್ಮಸ್ಥಳ ಚಲೋ' ಅಭಿಯಾನದಲ್ಲಿ ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಾದ್ಯಂತ ಸುಮಾರು 15,000ಕ್ಕೂ ಮಿಕ್ಕಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಭಕ್ತಾಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದರು.
ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ ಮತ್ತು ಮಂಡಲಗಳ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆ.28ರಂದು ಬಿಜೆಪಿ ದ.ಕ. ಜಿಲ್ಲಾ ಕಛೇರಿಯಲ್ಲಿ ನಡೆದ ಅವಿಭಜಿತ ದ.ಕ. ಜಿಲ್ಲೆಯ ಜಿಲ್ಲಾಧ್ಯಕ್ಷರುಗಳು, ಸಂಸದರು, ಶಾಸಕರು ಹಾಗೂ ಪಕ್ಷದ ಪ್ರಮುಖರ ಸಮಾಲೋಚನಾ ಸಭೆಯಲ್ಲಿ ಧರ್ಮ ರಕ್ಷಣೆಗಾಗಿ 'ಧರ್ಮಸ್ಥಳ ಚಲೋ' ಅಭಿಯಾನದ ರಾಜ್ಯ ಸಂಚಾಲಕ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್, ಸಹ ಸಂಚಾಲಕರಾದ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಅಭಿಯಾನದ ರೂಪುರೇಷೆಗಳ ಬಗ್ಗೆ ವಿಸ್ತ್ರತ ಮಾಹಿತಿಯನ್ನು ನೀಡಿದ್ದಾರೆ. ಉಭಯ ಜಿಲ್ಲೆಗಳಿಂದ ಗರಿಷ್ಠ ಸಂಖ್ಯೆಯ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಭಕ್ತಾಭಿಮಾನಿಗಳು 'ಧರ್ಮಸ್ಥಳ ಚಲೋ' ಅಭಿಯಾನದಲ್ಲಿ ಪಾಲ್ಗೊಳ್ಳಲು ಸಜ್ಜುಗೊಳಿಸುವಂತೆ ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ಅವರು ತಿಳಿಸಿದರು.
ಈ ನಿಟ್ಟಿನಲ್ಲಿ ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ ಮತ್ತು ಮಂಡಲಗಳ ಪದಾಧಿಕಾರಿಗಳ ಪೂರ್ವಭಾವಿ ಸಭೆಯ ಜೊತೆಗೆ ಶಾಸಕರುಗಳ ನೇತೃತ್ವದಲ್ಲಿ ಪ್ರತೀ ವಿಧಾನಸಭಾ ಕ್ಷೇತ್ರವಾರು ಅಭಿಯಾನದ ಪೂರ್ವ ಸಿದ್ಧತಾ ಸಭೆಗಳು ನಡೆದಿವೆ. ಎಲ್ಲರೂ ಸೆ.1 ಸೋಮವಾರ ಮಧ್ಯಾಹ್ನ ಗಂಟೆ 12.30ರೊಳಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಪಸ್ಥಿತರಿದ್ದು, ಮಧ್ಯಾಹ್ನ ಗಂಟೆ 2.00ಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯಲಿರುವ 'ಬೃಹತ್ ಸಮಾವೇಶ'ದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಅವರು ಹೇಳಿದರು.
ಈ ಹಿಂದೆ ಶಬರಿಮಲೆ, ತಿರುಪತಿ, ಇಶಾ ಫೌಂಡೇಶನ್ ಬಳಿಕ ಇದೀಗ ಶ್ರೀ ಕ್ಷೇತ್ರ ಧರ್ಮಸ್ಥಳದ ಸಹಿತ ಇತರ ಪ್ರಮುಖ ದೇವಸ್ಥಾನಗಳ ವಿರುದ್ಧ ಸಂಚು ರೂಪಿಸಿ, ಹಿಂದೂಗಳ ಅಸ್ಮಿತೆ, ನಂಬಿಕೆ ಹಾಗೂ ಭಾವನೆಗಳಿಗೆ ಘಾಸಿಯನ್ನುoಟುಮಾಡುತ್ತಿರುವ ಧರ್ಮ ದ್ರೋಹಿಗಳಿಗೆ, ಹಿಂದೂ ವಿರೋಧಿಗಳಿಗೆ ಕಠಿಣ ಎಚ್ಚರಿಕೆ ನೀಡುವ ಜೊತೆಗೆ ಧಾರ್ಮಿಕ ಕ್ಷೇತ್ರಗಳ ರಕ್ಷಣೆಗೆ ಬದ್ಧತೆಯನ್ನು ತೋರುವ ನಿಟ್ಟಿನಲ್ಲಿ 'ಧರ್ಮಸ್ಥಳ ಚಲೋ' ಅಭಿಯಾನವನ್ನು ಎಲ್ಲರೂ ಸೇರಿ ಸಂಘಟಿತ ಪ್ರಯತ್ನದ ಮೂಲಕ ಯಶಸ್ವಿಗೊಳಿಸಬೇಕು ಎಂದು ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
0 ಕಾಮೆಂಟ್‌ಗಳು