ಉಡುಪಿ: ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ ಆಗಸ್ಟ್ 15ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಗೀತಾ ಪರಿವಾರದ ಪ್ರಮುಖರೂ ಅಯೋಧ್ಯೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಕೋಶಾಧ್ಯಕ್ಷ ಹಾಗೂ ಮಥುರಾ ಶ್ರೀಕೃಷ್ಣ ಜನ್ಮಭೂಮಿ ಟ್ರಸ್ಟ್ ಉಪಾಧ್ಯಕ್ಷ ಶ್ರೀ ಗೋವಿಂದ ಗಿರಿ ಮಹಾರಾಜ್ ಆಗಮಿಸುವರು.
ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವ ಸಂದರ್ಭದಲ್ಲಿ ನಿರ್ಮಿಸಲಾಗಿರುವ ಸುವರ್ಣ ಪಥವನ್ನು ಚಾಂದ್ರ ಶ್ರೀಕೃಷ್ಣ ಜನ್ಮಾಷ್ಟಮಿ ಸದವಸರದಲ್ಲಿ ಅಪರಾಹ್ನ 4 ಗಂಟೆಗೆ ಲೋಕಾರ್ಪಣೆಗೊಳಿಸುವರು.
ಬಳಿಕ ರಾಜಾಂಗಣದಲ್ಲಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಅದಮಾರು ಶ್ರೀ ವಿಶ್ವಪ್ರಿಯತೀರ್ಥರು ಹಾಗೂ ಪುತ್ತಿಗೆ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ದಿವ್ಯೋಪಸ್ಥಿತಿಯಲ್ಲಿ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಶಾಸಕರಾದ ಯಶಪಾಲ್ ಸುವರ್ಣ ಮತ್ತು ಗುರ್ಮೆ ಸುರೇಶ ಶೆಟ್ಟಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಉದ್ಯಮಿ ಭುವನೇಂದ್ರ ಕಿದಿಯೂರು ಅಭ್ಯಾಗತರಾಗಿ ಆಗಮಿಸುವರು.
ಇದೇ ಸಂದರ್ಭದಲ್ಲಿ ಬೆಳಿಗ್ಗೆ ರಾಷ್ಟ್ರ ಧ್ವಜಾರೋಹಣ, ಶ್ರೀಕೃಷ್ಣ ನಾಮೋತ್ಸವ, ವಿದ್ವತ್ ಗೋಷ್ಟಿ, ನಿವೃತ್ತ ಸೇನಾನಿಗಳಿಂದ ಪಥಸಂಚಲನ ಇತ್ಯಾದಿ ಕಾರ್ಯಕ್ರಮ ನಡೆಯಲಿದೆ ಎಂದು ಮಠದ ದಿವಾನ ನಾಗರಾಜ ಆಚಾರ್ಯ ಮತ್ತು ಕಾರ್ಯದರ್ಶಿ ಪ್ರಸನ್ನಾಚಾರ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
0 ಕಾಮೆಂಟ್‌ಗಳು