ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ! ಸಂಪೂರ್ಣವಾಗಿ ಹೊತ್ತಿ ಉರಿದ ಬಸ್!

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ತಾಲೂಕಿನ ಶಾಂತಿಗ್ರಾಮ ಸಮೀಪ ಶುಕ್ರವಾರ ತಡರಾತ್ರಿ ಏಕಾಏಕಿ ಬೆಂಕಿ ತಗುಲಿದ ಘಟನೆ ನಡೆದಿದೆ.

ಬಸ್‌ನ ಟೈಯರ್ ಸ್ಫೋಟಗೊಂಡ ಪರಿಣಾಮ ಮೊದಲು ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ವ್ಯಾಪಕವಾಗಿ ಹಬ್ಬಿದ ಪರಿಣಾಮ ಕೆಲವೇ ಕ್ಷಣಗಳಲ್ಲಿ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ ಎಂದು ತಿಳಿದುಬಂದಿದೆ.

ಪರಿಸ್ಥಿತಿಯನ್ನು ಅರಿತ ಚಾಲಕ ತಕ್ಷಣ ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ ಒಳಗಿದ್ದ 36 ಮಂದಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾನೆ. ಚಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿದಂತಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದಿದ್ದರೂ, ಕೆಲ ಪ್ರಯಾಣಿಕರ ಮೊಬೈಲ್ ಫೋನ್‌ಗಳು, ಲಗೇಜ್ ಹಾಗೂ ಇತರೆ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ.

ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬಳಿಕ ಸ್ಥಳ ಪರಿಶೀಲನೆ ನಡೆಸಿ ಪ್ರಕರಣದ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು