ಕೊಲ್ಲೂರು: ಅಪಘಾತದಲ್ಲಿ ಮೃತಪಟ್ಡ ಮಹಿಳೆಯ ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿಯ ಬಂಧನ !

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಗ್ರಾಮದ ದಳಿ ಎಂಬಲ್ಲಿ ಮೇ 17ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೇರಳ ದ ಮಹಿಳೆಯ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಪಘಾತದ ಘಟನಾ ಸ್ಥಳದಲ್ಲಿ ಮೃತಪಟ್ಟಿದ್ದ ಮಹಿಳೆಯೊಬ್ಬರ ಮೈಮೇಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿರುವ ಕುರಿತು ಶ್ರೀಕುಮಾರ ಎಂಬವರು ನೀಡಿದ ದೂರಿನ ಮೇರೆಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 38/2026, ಕಲಂ 303(2) ಬಿಎನ್‌ಎಸ್ ಅಡಿಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಹೆಚ್.ಡಿ. ಕುಲಕರ್ಣಿ ಹಾಗೂ ಬೈಂದೂರು ವೃತ್ತದ ಪೊಲೀಸ್ ವೃತ್ತ ನಿರೀಕ್ಷಕರಾದ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ವಿನಯ ಎಂ. ಕೊರ್ಲಹಳ್ಳಿ ನೇತೃತ್ವದ ತಂಡ ತನಿಖೆ ಆರಂಭಿಸಿತು.

ಸಿಸಿಟಿವಿ ದೃಶ್ಯಾವಳಿ, ಸಾರ್ವಜನಿಕರು ಸ್ಥಳದಲ್ಲಿ ತೆಗೆದಿದ್ದ ವಿವಿಧ ಛಾಯಾಚಿತ್ರಗಳು ಹಾಗೂ ತಾಂತ್ರಿಕ ಮಾಹಿತಿಗಳ ಆಧಾರದ ಮೇಲೆ ಆರೋಪಿಯನ್ನು ಪ್ರಕರಣ ದಾಖಲಾದ 24 ಗಂಟೆಯೊಳಗೆ ಪತ್ತೆ ಹಚ್ಚಿ ಬಂಧಿಸಲಾಯಿತು.

ಬಂಧಿತನನ್ನು ಹೇಮಂತ (40), ನರಸಿಂಹ ಶೆಟ್ಟಿ ಅವರ ಪುತ್ರ, ಕಲ್ಯಾಣಿಗುಡ್ಡೆ, ಕೊಲ್ಲೂರು ಗ್ರಾಮ ನಿವಾಸಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ 3.910 ಗ್ರಾಂ ತೂಕದ ಉಂಗುರ (ಅಂದಾಜು ಮೌಲ್ಯ ₹57 ಸಾವಿರ), 3.450 ಗ್ರಾಂ ತೂಕದ ಬಳೆ (₹50 ಸಾವಿರ) ಹಾಗೂ 7.160 ಗ್ರಾಂ ತೂಕದ ಚಿನ್ನದ ಸರ (₹1 ಲಕ್ಷ) ಸೇರಿದಂತೆ ಒಟ್ಟು ಸುಮಾರು ₹2.07 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು