ಕುಂದಾಪುರ : ರಾಷ್ಟ್ರೀಯ ಹೆದ್ದಾರಿ 66ರ ಕೋಟೇಶ್ವರ ಅಂಡರ್‌ಪಾಸ್ ಸಮೀಪ ಸೋಮವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ಮಾಕೋಡು ಗ್ರಾಮದ ನಿವಾಸಿ ಪ್ರದೀಪ್ ಪೂಜಾರಿ (38) ಎಂದು ಗುರುತಿಸಲಾಗಿದೆ. ಅವರು ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದು, ಅವಿವಾಹಿತರಾಗಿದ್ದರು ಎಂದು ತಿಳಿದುಬಂದಿದೆ.
ಲಭ್ಯ ಮಾಹಿತಿಯಂತೆ, ಪ್ರದೀಪ್ ಪೂಜಾರಿ ಅವರು ಕೋಟೇಶ್ವರ ಪೇಟೆಯಿಂದ ತಮ್ಮ ಊರಿನತ್ತ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಈ ವೇಳೆ ಸರ್ವಿಸ್ ರಸ್ತೆಯ ಮೂಲಕ ಸಂಚರಿಸುತ್ತಿದ್ದ ಕಂಟೇನರ್ ಲಾರಿಯು ಅಂಡರ್‌ಪಾಸ್ ಸಮೀಪ ತಿರುವು ಪಡೆಯುವ ಸಂದರ್ಭದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ರಸ್ತೆ ಮೇಲೆ ಬಿದ್ದಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ನಂತರ ಸ್ಥಳೀಯರು ನೆರವಿಗೆ ಧಾವಿಸಿ ರಕ್ಷಣಾ ಕಾರ್ಯಕ್ಕೆ ಮುಂದಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಸುದ್ದಿ ತಿಳಿಯುತ್ತಿದ್ದಂತೆಯೇ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಯಿತು. ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿರಬಹುದೆಂಬ ಶಂಕೆಯೂ ವ್ಯಕ್ತವಾಗಿದೆ.

0 ಕಾಮೆಂಟ್‌ಗಳು