ಮೂಡುಬಿದಿರೆ: ಬಟ್ಟೆ ಒಣಗಿಸಲು ಹಾಕಿದ್ದ ಕಬ್ಬಿಣದ ತಂತಿಗೆ ವಿದ್ಯುತ್ ಪ್ರವಹಿಸಿದ ಪರಿಣಾಮ ತಾಯಿ ಮತ್ತು ಮಗ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಮೂಡುಬಿದಿರೆ ಸಮೀಪದ ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.
ಮೃತರನ್ನು ವರ್ಣಬೆಟ್ಟುವಿನ ನಿವಾಸಿ ಮರ್ಸಿ ಮಸ್ಕರೇನಸ್ (45) ಹಾಗೂ ಅವರ ಪುತ್ರ, 18 ವರ್ಷದ ಶೋನ್ ಮಸ್ಕರೇನಸ್ ಎಂದು ಗುರುತಿಸಲಾಗಿದೆ. ಶೋನ್ ಮೂಡುಬಿದಿರೆಯ ಹೋಲಿ ರೋಸರಿ ಶಾಲೆಯ ವಿದ್ಯಾರ್ಥಿಯಾಗಿದ್ದನು.
ಗುರುವಾರ ಬೆಳಿಗ್ಗೆ ಸುಮಾರು 7ರಿಂದ 8 ಗಂಟೆಯ ನಡುವೆ ಮನೆಯಲ್ಲಿ ಬಟ್ಟೆ ಒಣಗಿಸಲು ತೆರಳಿದ್ದ ಶೋನ್, ಕಬ್ಬಿಣದ ತಂತಿಗೆ ವಿದ್ಯುತ್ ಪ್ರವಹಿಸಿದ್ದರಿಂದ ಆಘಾತಕ್ಕೆ ಒಳಗಾಗಿದ್ದಾನೆ ಎನ್ನಲಾಗಿದೆ. ಬಟ್ಟೆ ಒಣಗಿಸುವ ತಂತಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿದ್ದೇ ಅವಘಡಕ್ಕೆ ಕಾರಣವೆಂದು ಪ್ರಾಥಮಿಕವಾಗಿ ತಿಳಿದುಬಂದಿದೆ.
