ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸೂಚನೆಯಂತೆ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ಸಂಘಟನಾ ಸೃಜನ ಅಭಿಯಾನ–2 ಕಾರ್ಯಕ್ರಮವನ್ನು ಉಡುಪಿ ಜಿಲ್ಲೆಯಲ್ಲಿ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯರು ಹಾಗೂ ಕಾರ್ಯಕರ್ತೆಯರು ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವುದು, ಬೂತ್ ಮಟ್ಟದಲ್ಲಿ ಪಕ್ಷದ ಕಾರ್ಯಚಟುವಟಿಕೆಗಳನ್ನು ವ್ಯವಸ್ಥಿತಗೊಳಿಸುವುದು ಹಾಗೂ ಮಹಿಳೆಯರನ್ನು ಪಕ್ಷದ ಸಂಘಟನೆಯಲ್ಲಿ ಇನ್ನಷ್ಟು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಈ ಅಭಿಯಾನದಡಿ ಜಿಲ್ಲಾ, ಬ್ಲಾಕ್, ಮಂಡಲ, ಗ್ರಾಮ ಪಂಚಾಯತ್ ಹಾಗೂ ವಾರ್ಡ್ ಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುವುದರ ಜೊತೆಗೆ ಬೂತ್ ಮಟ್ಟದಲ್ಲಿ ಸಮಿತಿಗಳನ್ನು ಸಮರ್ಪಕವಾಗಿ ರಚಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯರು ತಮ್ಮ ತಮ್ಮ ವ್ಯಾಪ್ತಿಯ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ಗ್ರಾಮ ಪಂಚಾಯತ್ ಮತ್ತು ವಾರ್ಡ್ ಮಟ್ಟದ ಮಹಿಳಾ ಕಾರ್ಯಕರ್ತೆಯರನ್ನು ಸಂಘಟಿಸಿ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಕೆಪಿಸಿಸಿ ವತಿಯಿಂದ ನೇಮಕಗೊಂಡಿರುವ SSA-2 ವೀಕ್ಷಕರಿಗೆ ಅಗತ್ಯ ಮಾಹಿತಿಗಳನ್ನು ಒದಗಿಸುವುದರ ಜೊತೆಗೆ ಸಂಘಟನಾ ಕಾರ್ಯಗಳಿಗೆ ಸಂಪೂರ್ಣ ಸಹಕಾರ ನೀಡಬೇಕು.
ಕೆಪಿಸಿಸಿ ಸೂಚನೆಯಂತೆ 28-09-2026ರಿಂದ 30-10-2026ರವರೆಗೆ ನಡೆಯಲಿರುವ ಅಭಿಯಾನದ ಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಮನೆಮನೆಗೆ ತೆರಳಿ ಪಕ್ಷದ ಸಂಘಟನೆಯನ್ನು ಬಲಪಡಿಸುವುದು, ಹೊಸ ಸದಸ್ಯರನ್ನು ಗುರುತಿಸುವುದು ಹಾಗೂ ಮಹಿಳೆಯರನ್ನು ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸುವ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು.
ಮಹಿಳೆಯರ ಭಾಗವಹಿಸುವಿಕೆ ಯಾವುದೇ ರಾಜಕೀಯ ಸಂಘಟನೆಯ ಶಕ್ತಿಯನ್ನು ಹೆಚ್ಚಿಸುತ್ತದೆ. ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿಯೂ ಮಹಿಳಾ ನಾಯಕಿಯರು ಮತ್ತು ಕಾರ್ಯಕರ್ತೆಯರ ಕೊಡುಗೆ ಅತ್ಯಂತ ಮಹತ್ವದ್ದಾಗಿದೆ. ಆದ್ದರಿಂದ ಈ ಅಭಿಯಾನವನ್ನು ಕೇವಲ ಸಂಘಟನಾ ಕಾರ್ಯಕ್ರಮವಾಗಿ ನೋಡದೆ, ಮಹಿಳಾ ಶಕ್ತಿಯನ್ನು ಒಗ್ಗೂಡಿಸಿ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಿಷ್ಠಗೊಳಿಸುವ ಅವಕಾಶವಾಗಿ ಬಳಸಿಕೊಳ್ಳಬೇಕು.
ಉಡುಪಿ ಜಿಲ್ಲೆಯ ಎಲ್ಲಾ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯರು, ಪದಾಧಿಕಾರಿಗಳು ಹಾಗೂ ಸಮಸ್ತ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ವೈಯಕ್ತಿಕ ಮುತುವರ್ಜಿಯಿಂದ ಈ ಅಭಿಯಾನದಲ್ಲಿ ಪಾಲ್ಗೊಂಡು, ಸಂಘಟನೆಯ ಯಶಸ್ಸಿಗೆ ಶ್ರಮಿಸಬೇಕೆಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳಾ ಶಕ್ತಿ – ಕಾಂಗ್ರೆಸ್ ಶಕ್ತಿ.
ಮಹಿಳೆಯರ ಸಂಘಟನೆ ಬಲಿಷ್ಠವಾದರೆ ಕಾಂಗ್ರೆಸ್ ಸಂಘಟನೆ ಮತ್ತಷ್ಟು ಬಲಿಷ್ಠವಾಗುತ್ತದೆ.
